﻿ಕೀರ್ತ.
92.
ಕೀರ್ತನೆ; ಸಬ್ಬತ್ ದಿನದ ಗೀತೆ. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. 
ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ, 
ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ. 
ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ. 
ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ. 
ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು. 
ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ. 
ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ. 
ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. 
ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ. 
ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ. 
ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು. 
ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು. 
ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು. 
ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. 
