﻿ಕೀರ್ತನೆಗಳು.
147.
ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದು; ದೇವರನ್ನು ಸ್ತುತಿಸುವುದು ರಮ್ಯವೂ, ಯೋಗ್ಯವೂ ಆಗಿದೆ. 
ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ. 
ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, ಅವರ ಗಾಯಗಳನ್ನು ಕಟ್ಟುತ್ತಾರೆ. 
ದೇವರು ನಕ್ಷತ್ರಗಳ ಸಂಖ್ಯೆಯನ್ನು ನಿರ್ಧರಿಸುತ್ತಾರೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆಯುತ್ತಾರೆ. 
ನಮ್ಮ ಯೆಹೋವ ದೇವರು ದೊಡ್ಡವರು, ಬಹು ಶಕ್ತರು; ಅವರ ವಿವೇಕಕ್ಕೆ ಎಣೆಯಿಲ್ಲ. 
ಯೆಹೋವ ದೇವರು ಸಾತ್ವಿಕರನ್ನು ಉದ್ಧರಿಸುತ್ತಾರೆ; ದುಷ್ಟರನ್ನು ದಂಡಿಸುತ್ತಾರೆ. 
ಯೆಹೋವ ದೇವರಿಗೆ ಸ್ತೋತ್ರಗೀತೆ ಹಾಡಿರಿ, ನಮ್ಮ ದೇವರನ್ನು ಕಿನ್ನರಿಯಿಂದ ಸ್ತುತಿಸಿರಿ. 
ದೇವರು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾರೆ; ಭೂಮಿಗೆ ಮಳೆಯನ್ನು ಸುರಿಸುತ್ತಾರೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾರೆ. 
ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ. 
ಕುದುರೆಯ ಶಕ್ತಿಯಲ್ಲಿ ಅವರಿಗೆ ಇಷ್ಟವಿಲ್ಲ; ಶೂರನ ಕಾಲ್ಬಲವನ್ನು ಮೆಚ್ಚುವುದಿಲ್ಲ. 
ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ. 
ಯೆರೂಸಲೇಮೇ, ಯೆಹೋವ ದೇವರನ್ನು ಸ್ತುತಿಸು; ಚೀಯೋನೇ, ನಿಮ್ಮ ದೇವರನ್ನು ಸ್ತುತಿಸು. 
ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ. 
ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ. 
ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾರೆ; ದೇವರ ವಾಕ್ಯವು ಬಹು ತೀವ್ರವಾಗಿ ಓಡುತ್ತದೆ. 
ದೇವರು ಹಿಮವನ್ನು ಉಣ್ಣೆಯ ಹಾಗೆ ಹರಡುತ್ತಾರೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ. 
ದೇವರು ನೀರುಗಡ್ಡೆಯನ್ನು ಕಲ್ಲು ಹರಳುಗಳಂತೆ ಸುರಿದು ಹಾಕುತ್ತಾರೆ; ಅವರು ಕಳುಹಿಸುವ ಚಳಿಯ ಮುಂದೆ ಯಾರು ನಿಲ್ಲುವರು? 
ದೇವರು ತಮ್ಮ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾರೆ; ದೇವರು ಗಾಳಿಯನ್ನು ಬೀಸುವಂತೆ ಮಾಡುತ್ತಾರೆ; ನೀರು ಹರಿಯುತ್ತದೆ. 
ದೇವರು ಯಾಕೋಬ್ಯರಿಗೆ ತಮ್ಮ ವಾಕ್ಯವನ್ನು ಪ್ರಕಟಿಸುತ್ತಾರೆ, ಇಸ್ರಾಯೇಲರಿಗೆ ತಮ್ಮ ತೀರ್ಪುಗಳನ್ನೂ, ತನ್ನ ನ್ಯಾಯವಿಧಿಗಳನ್ನೂ ಪ್ರಕಟಿಸುತ್ತಾರೆ. 
ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ. 
