﻿ಜ್ಞಾನೋಕ್ತಿಗಳು.
13.
ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ. 
ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ. 
ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು. 
ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು. 
ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ. 
ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ. 
ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ. 
ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. 
ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು. 
ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ. 
ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು. 
ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು. 
ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು. 
ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ. 
ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ. 
ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ. 
ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು. 
ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು. 
ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ. 
ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು. 
ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು. 
ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ. 
ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು. 
ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ. 
ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು. 
